ಮೂಡುಬಿದಿರೆ: ಶಿರ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಉದ್ಘಾಟನೆ ಹಾಗೂ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭವು ಜ.26ರಂದು ಪೂರ್ವಾಹ್ನ 10.30ಕ್ಕೆ ಶಿರ್ತಾಡಿ ಟ್ರೇಡ್ ಸೆಂಟರಿನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಸರ್ಕಾರದ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ವಹಿಸಲಿದ್ದಾರೆ.
ಶಾಸಕ ಉಮಾನಾಥ ಎ. ಕೋಟ್ಯಾನ್ ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ. ರೈ ಕಂಪ್ಯೂಟರ್ ವ್ಯವಸ್ಥೆಗೆ ಚಾಲನೆ ನೀಡಲಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಭಾಸ್ಕರ್ ಎಸ್. ಕೋಟ್ಯಾನ್ ಪಡಿತರ ವಿಭಾಗವನ್ನು ಉದ್ಘಾಟಿಸಲಿದ್ದಾರೆ.
ಈ ಸಂದರ್ಭದಲ್ಲಿ MKCC ಸಾಲ ವಿತರಣೆ, ಠೇವಣಿ ಪತ್ರ ಬಿಡುಗಡೆ, ಉಳಿತಾಯ ಖಾತೆ ಪುಸ್ತಕ ವಿತರಣೆ, ಸಂಚಯ ಠೇವಣಿ ಯೋಜನೆ ಹಾಗೂ ವೈಯಕ್ತಿಕ ಸಾಲ ವಿತರಣೆ ಕಾರ್ಯಕ್ರಮಗಳು ನಡೆಯಲಿವೆ. ನವೋದಯ ಸ್ವಸಹಾಯ ಖಾತೆ ವಿತರಣೆಯೂ ಇದೇ ಸಂದರ್ಭದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರು, ಉದ್ಯಮಿಗಳು, ಸಹಕಾರ ಇಲಾಖೆಯ ಅಧಿಕಾರಿಗಳು, ಸಂಘದ ನಿರ್ದೇಶಕರು, ಸಿಬ್ಬಂದಿ ವರ್ಗ ಹಾಗೂ ಸಂಘದ ಸದಸ್ಯರು ಭಾಗವಹಿಸಲಿದ್ದಾರೆ.
ಶಿರ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್. ಪ್ರವೀಣ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಉಪಾಧ್ಯಕ್ಷ ಚಿಂತನ ಲೋಬೋ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಮಲಾಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

