ಮೂಡುಬಿದಿರೆ :ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು ಬುಧವಾರ ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿ, ಗ್ರಾಮದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು, ವಿವಿಧ ಸರ್ಕಾರಿ ಯೋಜನೆಗಳು ಹಾಗೂ ಸಾರ್ವಜನಿಕರಿಗೆ ಲಭ್ಯವಾಗುವ ಸವಲತ್ತುಗಳ ಸದುಪಯೋಗದ ಕುರಿತು ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ವ್ಯಾಪ್ತಿಯ ಮೂಲಸೌಕರ್ಯ ಅಭಿವೃದ್ಧಿ, ಸಾರ್ವಜನಿಕ ಸಮಸ್ಯೆಗಳ ಪರಿಹಾರ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಅಗತ್ಯತೆ ಕುರಿತು ಚರ್ಚೆ ನಡೆಯಿತು. ಗ್ರಾಮೀಣಾಭಿವೃದ್ಧಿಗೆ ಅಗತ್ಯವಿರುವ ಸಹಕಾರವನ್ನು ನೀಡುವುದಾಗಿ ವಿಧಾನ ಪರಿಷತ್ ಸದಸ್ಯರು ಭರವಸೆ ನೀಡಿದರು.
ಸಭೆಯಲ್ಲಿ ಪಂಚಾಯತ್ ಅಧ್ಯಕ್ಷೆ ರಾಧಾ, ಉಪಾಧ್ಯಕ್ಷ ದಯಾನಂದ, ಮಾಜಿ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಪಂಚಾಯತ್ ಸದಸ್ಯರು, ಪಿಡಿಒ ಭೀಮಾ ಬಿ. ನಾಯಕ್, ಅಕ್ರಮ–ಸಕ್ರಮ ಸಮಿತಿಯ ಸದಸ್ಯ ಮಿತ್ತಬೈಲು ವಾಸುದೇವ ನಾಯಕ್, ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

