ಎಕ್ಸಲೆಂಟ್ ಮೂಡಬಿದಿರೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

BIDIRE NEWS

ಮೂಡಬಿದಿರೆ:ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಮೂಡಬಿದರೆ ಘಟಕದಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ, ಶಿಸ್ತು ಹಾಗೂ ರಾಷ್ಟ್ರಭಕ್ತಿಯ ಭಾವನೆಯೊಂದಿಗೆ ಆಚರಿಸಲಾಯಿತು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ರಾಜ್ಯಶಾಸ್ತ್ರ ಉಪನ್ಯಾಸಕ ಡಾ. ಪ್ರವೀಣ್ ಕೆ. ಅವರು ಭಾಗವಹಿಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತದ ಸಂವಿಧಾನದ ಮಹತ್ವ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ಇಂದಿನ ಯುವಜನರ ಜವಾಬ್ದಾರಿಯ ಕುರಿತು ವಿವರಿಸಿದರು.
“ಸ್ವಾತಂತ್ರ್ಯ, ಸಮಾನತೆ ಹಾಗೂ ನ್ಯಾಯ ಎಂಬ ಮೂಲತತ್ವಗಳ ಆಧಾರದಲ್ಲಿ ನಾವು ನಮ್ಮ ಸಂವಿಧಾನವನ್ನು ರೂಪಿಸಿಕೊಂಡಿದ್ದೇವೆ. ಸಂವಿಧಾನವು ನಮ್ಮ ವ್ಯಕ್ತಿತ್ವವನ್ನು ರೂಪಿಸುವ ಶಕ್ತಿ ಹೊಂದಿದ್ದು, ನಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನೂ ನಮಗೆ ತಿಳಿಸುತ್ತದೆ. ಪ್ರತಿಯೊಬ್ಬ ನಾಗರಿಕನು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ  ರಶ್ಮಿತಾ ಜೈನ್ ಮಾತನಾಡಿ,
“ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಶಿಸ್ತು ಹಾಗೂ ನಾಗರಿಕ ಕರ್ತವ್ಯಗಳ ಅರಿವು ಮೂಡಬೇಕು. ರಾಷ್ಟ್ರದ ಬಗ್ಗೆ ಕಾಳಜಿ ಹಾಗೂ ಅಭಿಮಾನವನ್ನು ಬೆಳೆಸಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಮೂಲ ಕರ್ತವ್ಯವಾಗಿದೆ” ಎಂದು ಹೇಳಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಬಳಿಕ ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯೋಪಾಧ್ಯಾಯ  ಶಿವಪ್ರಸಾದ್ ಭಟ್, ಉಪಮುಖ್ಯೋಪಾಧ್ಯಾಯ ಜಯಶೀಲ್ ಸೇರಿದಂತೆ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿಕ್ಷಕಿ ಚೈತ್ರ ಅವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

slider