MOODUBIDIRE
Bidire News

ಮೂಡುಬಿದಿರೆ ಬಸ್ ನಿಲ್ದಾಣದ ಪಾರ್ಕಿಂಗ್ ಅವ್ಯವಸ್ಥೆ: ಕ್ರಮಕ್ಕೆ ಮುಖ್ಯಮಂತ್ರಿಗಳ ಸಚಿವಾಲಯ ಸೂಚನೆ

ಮೂಡುಬಿದಿರೆ: ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ಸೇರಿದಂತೆ ವಿವಿಧ ಅವ್ಯವಸ್ಥೆಗಳು ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಸಚಿವಾಲಯವು ಸಮಸ್ಯೆಯನ್ನು ಪರಿಶೀಲಿಸಿ ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಪುರಸಭೆಗೆ ಸೂಚಿಸಿದೆ.

ಈ ಸಂಬಂಧ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ. ವೈಷ್ಣವಿ ಅವರು ಸಂಬಂಧಪಟ್ಟ ಸರ್ಕಾರಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ವಾಸ್ತವಾಂಶಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ, ನಿಯಮಾನುಸಾರ ತಕ್ಷಣ ಕ್ರಮ ಕೈಗೊಂಡು ಅನುಪಾಲನಾ ವರದಿ ಸಲ್ಲಿಸುವಂತೆ ಸಚಿವಾಲಯ ಸೂಚಿಸಿದೆ.

ಇದಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪುರಸಭೆಯು ಅ. 22ರಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗೆ ಪತ್ರ ಬರೆದು ಕೈಗೊಂಡ ಕ್ರಮಗಳ ವಿವರ ನೀಡಿದೆ. ಆಗಸ್ಟ್ 27ರಂದು ಪುರಸಭೆಯಲ್ಲಿ ನಡೆದ ಸಭೆಯಲ್ಲಿ ಸಂಚಾರ ಮತ್ತು ಪಾರ್ಕಿಂಗ್ ಸಮಸ್ಯೆಗಳ ಕುರಿತು ಚರ್ಚಿಸಲಾಗಿತ್ತು. ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು, ಪುರಸಭೆ ಅಧಿಕಾರಿಗಳು ಹಾಗೂ ಇತರ ಸಂಬಂಧಪಟ್ಟ ಇಲಾಖೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಸೆ. 1ರಂದು ಪೊಲೀಸ್ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿಯೂ ಪಾರ್ಕಿಂಗ್ ಮತ್ತು ಸಂಚಾರ ವ್ಯವಸ್ಥೆ ಸುಧಾರಿಸುವ ಕುರಿತು ಚರ್ಚಿಸಲಾಗಿತ್ತು.

ಪುರಸಭೆ ವ್ಯಾಪ್ತಿಯ 10 ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕರು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಮಾರ್ಗಸೂಚಿ ಫಲಕಗಳನ್ನು ಅಳವಡಿಸಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಅಪಘಾತ ತಡೆಗಟ್ಟಲು ಅಗತ್ಯವಿರುವ ಕಡೆ ಸಂಚಾರ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸೆ. 2ರಿಂದ ಬಸ್ ನಿಲ್ದಾಣದಲ್ಲಿ ಬಸ್‌ಗಳ ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡಿದ್ದು, ಬಸ್ ನಿಲುಗಡೆ ವ್ಯವಸ್ಥೆಯನ್ನು ಸುಧಾರಿಸಲಾಗಿದೆ. ಬಸ್‌ಗಳ ಸಂಚಾರಕ್ಕೆ ಅಡ್ಡಿಯಾಗದಂತೆ ಕ್ರಮ ವಹಿಸಲಾಗಿದೆ. ಬಸ್ ನಿಲ್ದಾಣದ ಒಳಭಾಗದಲ್ಲಿ ಇಂಟರ್‌ಲಾಕ್ ಅಳವಡಿಕೆ ಕಾರ್ಯ ಕೈಗೊಂಡಿರುವುದಾಗಿ ಪುರಸಭೆ ವಿವರಿಸಿದೆ.